Thursday, Feb 25 2021 | Time 04:18 Hrs(IST)
Karnataka Share

ಶಿವಮೊಗ್ಗ ದುರಂತ; ಪ್ರಧಾನಿ ಮೋದಿ ಸಂತಾಪ

ಬೆಂಗಳೂರು, ಜ.22 (ಯುಎನ್ಐ) ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ 8ಕ್ಕೂ ಅಧಿಕ ಕಾರ್ಮಿಕರು ಮೃತಪಟ್ಟಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ಸಂಭವಿಸಿರುವ ಸ್ಫೋಟ ಘಟನಯಲ್ಲಿ ಹಲವಾರು ಜೀವ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಎಲ್ಲಾ ರೀತಿ ಪರಿಹಾರಗಳನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಸ ಸೂಚಿಸಿದ್ದಾರೆ.
ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಯುಎನ್ಐ ಎಎಚ್ 0850