Connect with us


      




ಕರ್ನಾಟಕ

ಕೋವಿಡ್ ಲಸಿಕಾಕರಣ: ಶೇ. ನೂರರಷ್ಟು ಪ್ರಗತಿ ಸಾಧಿಸಲು ಸಚಿವ ಎಂಟಿಬಿ ಸೂಚನೆ

Kumara Raitha

Published

on

ಬೆಂಗಳೂರು: ಜನವರಿ 03 (ಯು.ಎನ್.ಐ.) ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 96 ರಷ್ಟು ಮೊದಲ ಡೋಸ್ ಹಾಗೂ ಶೇ. 86 ರಷ್ಟು ಎರಡನೇ ಡೋಸ್ ಕೋವಿಡ್ ಲಸಿಕಾ ಪ್ರಗತಿ ಸಾಧಿಸಲಾಗಿದೆ. ಇದನ್ನು ಶೇಕಡಾ ನೂರರಷ್ಟಕ್ಕೆ ವಿಸ್ತರಿಸಬೇಕಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿಂದು ನಡೆದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 48,865 ಮಕ್ಕಳಿಗೆ ಲಸಿಕೆ ನೀಡಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೇವನಹಳ್ಳಿ ತಾಲ್ಲೂಕಿನಲ್ಲಿ 10414, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 15022, ಹೊಸಕೋಟೆ ತಾಲ್ಲೂಕಿನಲ್ಲಿ 13148 ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 10281 ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
15 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಮಕ್ಕಳನ್ನು ಕೋವಿಡ್ ಸೋಂಕಿನಿಂದ ಸುರಕ್ಷಿತರನ್ನಾಗಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ದೇಶವಾಗಿದೆ.
ಮಹಾರಾಷ್ಟ್ರ, ದೆಹಲಿಯಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡಿದೆ. ದಿನೇದಿನೇ ರಾಜ್ಯದಲ್ಲಿಯೂ ಸಾವಿರಾರು ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಜಾಗ್ರತೆ ವಹಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಯುವಕರು, ವಯಸ್ಕರು ಸೇರಿದಂತೆ ರಾಜ್ಯದಲ್ಲಿ 48 ಸಾವಿರ ಜನರು ಸಾವನ್ನಪ್ಪಿದ್ದು, ಅಪಾರ ಸಾವು ನೋವು ಸಂಭವಿಸಿರುವುದರಿಂದ, ಮುನ್ನೆಚ್ಚರಿಕೆಯಾಗಿ ಯುವಜನತೆಗೆ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಸಭೆಗಳನ್ನು ನಡೆಸಿ, ಕೇಂದ್ರ ಸರ್ಕಾರದ ನಿಯಮಾವಳಿ ಹಾಗೂ ಸೂಚನೆಗಳಂತೆ ರಾಜ್ಯದಲ್ಲಿ 37 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಮೂರನೇ ಅಲೆ ಎದುರಿಸಲು ಅಗತ್ಯ ವೈದ್ಯಕೀಯ ತಯಾರಿಯೊಂದಿಗೆ, ಮುಂಜಾಗ್ರತೆಯಿಂದ ಜಿಲ್ಲಾಡಳಿತದೊಂದಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೈಜೋಡಿಸಿ, ಮಹಾಮಾರಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಶ್ರಮಿಸಬೇಕು ಎಂದು ಸೂಚಿಸಿದರು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯು ಆರೋಗ್ಯ ಕ್ಷೇತ್ರದಲ್ಲಿ ಬಹುಮುಖ್ಯ ಯೋಜನೆಯಾಗಿದ್ದು, ರೋಗಿಗಳು ತಮ್ಮ ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ನೊಂದಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋದರೆ, ಅದೇ ಸರ್ಕಾರಿ ಆಸ್ಪತ್ರೆಯು ಚಿಕಿತ್ಸೆ ನೀಡುವ ಸಾಮರ್ಥ್ಯ ಹೊಂದಿದ್ದಲ್ಲಿ ಅಲ್ಲಿಯೇ ರೋಗಿಗೆ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತೆಯು ಚಿಕಿತ್ಸೆ ನೀಡುವ ಸಾಮರ್ಥ್ಯವನ್ನು ಹೊಂದಿಲ್ಲದಿದ್ದರೆ, ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಛಿಸುವ ಯಾವುದೇ ನೋಂದಾಯಿತ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.

Share