Connect with us


      
ಕರ್ನಾಟಕ

ಶಾಲೆಗಳಿಗೆ ರಜೆ ನೀಡುವ ಬಗ್ಗೆ ತಜ್ಞರ ಸಲಹೆಯಂತೆ ಕ್ರಮ; ಮುಖ್ಯಮಂತ್ರಿ

UNI Kannada

Published

on

ಕಲಬುರಗಿ,ಜ ೪(ಯು ಎನ್ ಐ) ಕಲ್ಯಾಣ ಕರ್ನಾಟಕ ಭಾಗದಲ್ಲಿ ೧೪೦೦೦ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ೧೪೦೦೦ ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ೫೦೦೦ ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು ೧೪೦೦೦ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ(ಕೆ ಕೆ ಆರ್ ಡಿ ಬಿ) ರಚನೆಯಾಗದಿರುವ ಬಗ್ಗೆ ಪ್ರತಿಕ್ರಿಯಿಸಿ ಈ ವಾರದಲ್ಲಿ ಕೆ ಕೆ ಆರ್ ಡಿ ಬಿಗೆ ಪೂರ್ಣ ಪ್ರಮಾಣದ ಅಧಿಕಾರಿಗಳನ್ನು ನೀಡಲಾಗುವುದು. ಇನ್ನೆರಡು ದಿನಗಳಲ್ಲಿ ಮಂಡಳಿಯ ರಚನೆ ಆಗಲಿದೆ. ಮಂಡಳಿಗೆ ೩೦೦೦ ಕೋಟಿ ರೂ.ಗಳ ಕ್ರಿಯಾಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇಂದು ಸಂಜೆ ಟಾಸ್ಕ್ ಫೋರ್ಸ್, ತಜ್ಞರ ಸಮಿತಿ ಸಮ್ಮುಖದಲ್ಲಿ ಕೋವಿಡ್ ಬಗ್ಗೆ ಸಭೆ ಜರುಗಲಿದೆ. ವಿಶ್ವದಲ್ಲಿ ಪುನ: ಕರೋನಾ ಹೆಚ್ಚಳವಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಭಾರತ ಸರ್ಕಾರ ಎಚ್ಚರಿಕೆ ನೀಡಿ, ಹಲವಾರು ಮಾರ್ಗದರ್ಶನವನ್ನು ನೀಡಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಮೇಲೆಯೂ ಆಗುತ್ತದೆ. ಗಡಿಗಳಲ್ಲಿ ಕಠಿಣ ಕ್ರಮಗಳನ್ನು ಜಾರಿ ಮಾಡಲಾಗಿದೆ. ಎರಡು ಡೋಸು ಹಾಗೂ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹಾಗೂ ಒಮಿಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕೋವಿಡ್ ನಿಯಂತ್ರಣಕ್ಕೆ ಬರುವ ದಿನಗಳಲ್ಲಿ ದೀರ್ಘಾವಧಿಯ ಯೋಜನೆಯನ್ನು ರೂಪಿಸಬೇಕಾಗಿದೆ ಎಂದು ತಿಳಿಸಿದರು.
ಕೋವಿಡ್ ೧ ಹಾಗೂ ೨ ನೇ ಅಲೆ ನಿರ್ವಹಣೆಯ ಅನುಭವ ಹೊಂದಿದ್ದು, ಆರೋಗ್ಯ ಮೂಲ ಸೌಕರ್ಯಗಳನ್ನು ವೃದ್ಧಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಹಾಸಿಗೆಗಳು, ಐಸಿಯು, ಆಕ್ಸಿಜನ್ ಬೆಡ್ಸ್ ಗಳನ್ನು ಹೆಚ್ಚಿಸಲಾಗಿದೆ. ಜಿಲ್ಲೆಗಳಿಂದ ಔಷಧಿಗಳ ಬೇಡಿಕೆ ತರಿಸಿಕೊಳ್ಳಲಾಗಿದೆ. ಚಿಕಿತ್ಸಾ ಸೌಲಭ್ಯಗಳಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ತಜ್ಞರ ಸಲಹೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share